ಮಂಗಳೂರು : 2012ರ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗಾಗಿ ಕರ್ನಾಟಕ ಸರ್ಕಾರ ಗುರುವಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ.
ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ SIT ಕಾರ್ಯನಿರ್ವಹಿಸಲಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಡಿಐಜಿ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ, ಬೆಂಗಳೂರು ಗುಪ್ತಚರ ವಿಭಾಗದ ಎಸ್ಪಿ ನಿಶಾ ಜೇಮ್ಸ್, ಬೆಂಗಳೂರು ಸಿಐಡಿಯ ಎಸ್ಪಿ ಲೋಕೇಶ್ ಜಗಲಾಸರ್ ಹಾಗೂ ಬೆಂಗಳೂರು ಗ್ರಾಮಾಂತರದ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ತಂಡದ ಸದಸ್ಯರಾಗಿದ್ದಾರೆ.
ಸುಮಾರು 14 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 21ರಂದು ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರ SIT ರಚಿಸಿ, ಮೂರು ತಿಂಗಳೊಳಗೆ ಅನುಸರಣೆ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿತ್ತು.
2012ರಲ್ಲಿ ನಡೆದಿದ್ದೇನು?
ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ 17 ವರ್ಷದ ಸೌಜನ್ಯ, 2012ರ ಅಕ್ಟೋಬರ್ 9ರಂದು ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವೇಳೆ ನಾಪತ್ತೆಯಾಗಿದ್ದರು. ಮರುದಿನ ಧರ್ಮಸ್ಥಳದ ನೇತ್ರಾವತಿ ನದಿ ಸಮೀಪದ ಅರಣ್ಯ ಪ್ರದೇಶದಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿತ್ತು. ಪ್ರಕರಣದ ತನಿಖೆಯನ್ನು ಕರ್ನಾಟಕ ಸಿಐಡಿ ಹಾಗೂ ನಂತರ ಸಿಬಿಐ ನಡೆಸಿದರೂ, ಅಪರಾಧಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ.
ಪ್ರಕರಣದಲ್ಲಿ ಏಕೈಕ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು 2023ರ ಜೂನ್ನಲ್ಲಿ ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿತ್ತು. ಅದಕ್ಕೂ ಮುನ್ನ ಅವರು ಸುಮಾರು ಆರು ವರ್ಷ ಜೈಲಿನಲ್ಲಿ ಇದ್ದರು.
2024ರಲ್ಲಿ ಸೌಜನ್ಯ ತಾಯಿ ಕುಸುಮಾವತಿ ಮರು ತನಿಖೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಆರಂಭದಲ್ಲಿ ಮರು ತನಿಖೆಗೆ ವಿರೋಧ ವ್ಯಕ್ತಪಡಿಸಿದ್ದ ಕರ್ನಾಟಕ ಸರ್ಕಾರ, ಬಳಿಕ ತನ್ನ ನಿಲುವು ಬದಲಿಸಿ ಹೊಸ SIT ರಚಿಸಿ ತನಿಖೆ ನಡೆಸಲು ಸಿದ್ಧವಿರುವುದಾಗಿ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು. ಇದೀಗ ನ್ಯಾಯಾಲಯದ ನಿರ್ದೇಶನದಂತೆ SIT ರಚಿಸಲಾಗಿದ್ದು, ಪ್ರಕರಣದ ತನಿಖೆ ಮತ್ತೆ ಆರಂಭವಾಗಲಿದೆ.







